ಹೆಚ್. ಕೆ. ಎಸ್. ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ, ಮಹಿಳಾ ಮತ್ತು ಮಕ್ಕಳ ಸಂರಕ್ಷಣಾ ಕಾರ್ಯಕ್ರಮ
ದಿನಾಂಕ: 09–08–2025, ನಗರದ ಪ್ರತಿಷ್ಠಿತ ಸಂಸ್ಥೆಯಾದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ, ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವದ ಹೆಚ್. ಕೆ. ಎಸ್ ಪದವಿ ಪೂರ್ವ ಕಾಲೇಜು, ಹಾಸನ ಇಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಾಸನ ಇದರ ವತಿಯಿಂದ ಪೋಕ್ಸೋ ಕಾಯಿದೆ, ಮಹಿಳಾ ಮತ್ತು ಮಕ್ಕಳ ಸಂರಕ್ಷಣಾ ಕಾರ್ಯಕ್ರಮದ ಕುರಿತು ಕಾನೂನು ಅರಿವು ಕಾರ್ಯಕ್ರಮ ನೆರವೇರಿತು.
ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಹಾಸನದ ಜಿಲ್ಲಾ ನ್ಯಾಯಾಧೀಶರಾದ ಶ್ರೀ ರವಿಕುಮಾರ್ ಎಚ್ ಆರ್ ಅವರು ಫೋಕ್ಸೋ ಕಾಯ್ದೆಯ ಕುರಿತಾಗಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು. ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ, ವಿವಿಧ ಕ್ಷೇತ್ರಗಳಲ್ಲಿ ಆಗುತ್ತಿರುವ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಮಕ್ಕಳ ಲೈಂಗಿಕ ದುರುಪಯೋಗದ ವಿರುದ್ಧ ಕಾನೂನು ಕ್ರಮ, ಮಕ್ಕಳ ಕಾನೂನಿನ ಕುರಿತಾಗಿ ವಿದ್ಯಾರ್ಥಿಗಳಿಗೆ ವಿಶೇಷ ಸಂಗತಿಗಳನ್ನು ತಿಳಿಸಿಕೊಟ್ಟರು. ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಶ್ರೀ ವಿಮಲ್ ರಾಜ್ ಜಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ವೇದಿಕೆಯಲ್ಲಿ ಪ್ರಾಂಶುಪಾಲರಾದ ಶ್ರೀ ಪ್ರವೀಣ್ ಎ ಹಾಗೂ ಉಪ ಪ್ರಾಂಶುಪಾಲರಾದ ಆದಿತ್ಯ ವಟಿ ಕೆ ಅವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕರಾದ ರಮೇಶ್. ಎಂ. ನಿರೂಪಿಸಿದರೆ, ಸಂಸ್ಕೃತ ಉಪನ್ಯಾಸಕರಾದ ಗಣೇಶ ಕೆ ಭಟ್ ಸ್ವಾಗತಿಸಿದರು. ಆಂಗ್ಲ ಭಾಷಾ ಉಪನ್ಯಾಸಕರಾದ ಶ್ರೀನಿವಾಸ ಜೆ ಎನ್ ಅವರು ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.